ನವದೆಹಲಿ, ಸೆ 21 (DaijiworldNews/HR): ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ಸರ್ವೋಚ್ಛ ನ್ಯಾಯಾಲವು ನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಿದ್ದು, ಕಾವೇರಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕಕ್ಕೆ ದೊಡ್ಡ ಹಿನ್ನಡೆಯಾಗಿದೆ.
ಅರ್ಜಿ ವಿಚಾರಣೆ ನಡೆಸಿದ ಬಿ.ಆರ್ ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠವು, ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕಾಗುತ್ತದೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಹೇಳಿದೆ.
ಇನ್ನು ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್ ನೀರು ಬಿಡಬೇಕು. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದಿದೆ.