ಬೆಂಗಳೂರು, ಸೆ 21 (DaijiworldNews/HR): ಕಾವೇರಿ ನದಿ ನೀರು ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು ಎಂದು ಜೆಡಿಎಸ್ ನಾಯಕ ಮತ್ತು ಚಿತ್ರ ನಟ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಪೋಸ್ಟ್ ಮಾಡಿರುವ ಅವರು, ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯ ಕಾಂಗ್ರೆಸ್ ಸರಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಇನ್ನು ರಾಜ್ಯದಲ್ಲಿ ನೀರಿನ ಕೊರತೆ ಇದೆ ಮಳೆ ಕೈಕೊಟ್ಟಿದೆ. ಜಲಾಶಯಗಳು ಬರಿದಾಗಿವೆ. ಆದರೂ ತಮಿಳುನಾಡಿಗೆ ರಾಜ್ಯ ಸರಕಾರ ಏಕಪಕ್ಷೀಯವಾಗಿ ನೀರು ಹರಿಸಿದ್ದು ಅಕ್ಷಮ್ಯ. ಬ್ರಿಟೀಷರ ಕಾಲದಲ್ಲಿಯೇ ಶುರುವಾದ ಅನ್ಯಾಯದ ಪರಂಪರೆಯನ್ನು ನಮ್ಮ ರಾಜ್ಯ ಸರಕಾರವೇ ಮುಂದುವರಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.