ಕಡೂರು, ಅ 02 (DaijiworldNews/MS): ಕೋಮುವಾದಿ ಪಕ್ಷದ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆಯೆನ್ನುವವರು ಕೇರಳದಲ್ಲಿ ಮುಸ್ಲಿಂ ಲೀಗ್ ಜತೆ ಹೊಂದಾಣಿಕೆ ಮಾಡಿಕೊಂಡಿರುವುದ ಬಗ್ಗೆ ಏನು ಹೇಳುತ್ತಾರೆ. ಮುಸ್ಲಿಂ ಲೀಗ್ ಕೋಮುವಾದಿ ಪಕ್ಷವಲ್ಲವೇ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಶ್ನಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿವಿಧ ರಾಜ್ಯಗಳಲ್ಲಿ ವಿಭಿನ್ನ ಪಕ್ಷಗಳಿಗೆ ಮತದಾರರು ಮತ ನೀಡಿದರೂ ದೇಶದಲ್ಲಿ ಬಿಜೆಪಿ ಸರ್ಕಾರವಿರಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿಯವರೇ ಸಮರ್ಥ ನಾಯಕ ಎಂದು ನಿರ್ಧರಿಸಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಂಡಿತಾ. ಈ ಬಗ್ಗೆ ಯಾವುದೇ ಅನುಮಾನವಿಲ್ಲ. ಬಿಜೆಪಿ ಜೆಡಿಎಸ್ ಮೈತ್ರಿ ಕೂಟ ೨೫ ಕ್ಕೂ ಹೆಚ್ಚು ಸ್ಥಾನ ಪಡೆಯುವುದು ನಿಶ್ಚಿತ ಎಂದು ಹೇಳಿದರು.
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ನ್ಯಾಯಮಂಡಳಿಯವರು ಎಸಿ ರೂಮಿನಲ್ಲಿ ಕುಳಿತು ದಿನಕ್ಕೊಂದು ಆದೇಶ ಹೊರಡಿಸುವುದು ಸರಿಯಲ್ಲ. ಕೆಆರ್ಎಸ್ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದರು.