ಬೆಂಗಳೂರು, ಅ 07 (DaijiworldNews/AK) : ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಸೋಮಶೇಖರ್ ಅಪಸ್ವರ ಎತ್ತಿರುವುದರಿಂದ , ಇನ್ನು ಮುಂದೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ಹೇಳಿಕೆ ನೀಡದಂತೆ ಸೋಮಶೇಖರ್ ಅವರಿಗೆ ಮನವರಿಕೆ ಮಾಡಿಕೊಡುವ ಮತ್ತು ಸೂಚನೆ ನೀಡುವ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನೀಡಿದೆ.
2018 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ವಿರೋಧ ಪಕ್ಷದ ಶಾಸಕರಲ್ಲಿ ಸೋಮಶೇಖರ್ ಅವರು ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಸಹಾಯ ಮಾಡಿದ್ದರು, ಆದ್ದರಿಂದ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ವಿರುದ್ಧವಾಗಿ ಹೋದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬಿಜೆಪಿ ಹಿಂದೇಟು ಹಾಕಿದೆ ಎಂದು ಮೂಲಗಳು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಸೋಮಶೇಖರ್ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದರು, ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.