ಬೆಂಗಳೂರು, ಅ 26 (DaijiworldNews/MS): ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿಷಾದ ವ್ಯಕ್ತಪಡಿಸಿರುವ ಸಿಎಂ" ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದುಎಂದು ಬರೆದುಕೊಂಡಿದ್ದಾರೆ.
ಪಂಚರ್ ಆಗಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ, ಟಾಟಾ ಸುಮೋ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ನಡೆದಿತ್ತು. ಘಟನೆಯಲ್ಲಿ ನಾಲ್ವರು ಮಹಿಳೆಯರು ಒಂದು ಗಂಡು ಮಗು ಹಾಗೂ ಎಂಟು ಮಂದಿ ಪುರುಷರು ಮೃತಪಟ್ಟಿದ್ದರು. ಮೃತರ ಪೈಕಿ ಬಹುತೇಕರು ಆಂಧ್ರಪ್ರದೇಶದವರಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.