ಬೆಂಗಳೂರು, ಡಿ 01 (DaijiworldNews/HR): ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ.
ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿ ಇಂದು ರಜೆ ಘೋಷಿಸಿದ್ದಾರೆ.
ಇನ್ನು ಕಳೆದ 1 ವರ್ಷದಿಂದ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದ್ದು, ಕಳೆದ ವರ್ಷ ಒಂದೇ ದಿನ 30 ಶಾಲೆಗಳಿಗೆ ಇ-ಮೇಲ್ ಬೆದರಿಕೆ ಹಾಕಲಾಗಿತ್ತು.
ಆದರೆ ಈವರೆಗೂ ಬಾಂಬ್ ಬೆದರಿಕೆ ಹಾಕಿರುವವರ ಬಂಧನವಾಗಿಲ್ಲ. ಇದೀಗ ಮತ್ತೆ ಅದೇ ರೀತಿ ಮುಂದುವರೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.