ಬೆಳಗಾವಿ, ಡಿ 4 (DaijiworldNews/AK): ಇಂದು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪಂಚರಾಜ್ಯ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಪೇಕ್ಷಿತ ಯಶಸ್ಸು ಸಾಧ್ಯವಾಗದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವುದಿಲ್ಲ. ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು ಎಂದರು.
ವಿರೋಧಪಕ್ಷದವರಿಗೆ ಪ್ರಶ್ನಿಸುವ ನೈತಿಕತೆ ಇಲ್ಲ:
ಈ ಬಾರಿ ವಿರೋಧಪಕ್ಷದವರು ಜಂಟಿಯಾಗಿ ಹೋರಾಟ ಕೈಗೊಳ್ಳಲಿದ್ದಾರೆ ಎಂಬುದಕ್ಕೆ ಪ್ರತಿಕ್ರಯಿಸುತ್ತಾ, ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಸರ್ಕಾರ ಸಿದ್ಧವಿದೆ ಎಂದರು.