ಬೆಳಗಾವಿ, ಡಿ 06 (DaijiworldNews/AK): ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಗಳಲ್ಲಿ ಅನುಚಿತ ವಿಧಾನ ಬಳಕೆಯನ್ನು ನಿರ್ಬಂಧಿಸಲು ಮುಂದಾಗಿರುವ ರಾಜ್ಯ ಸರಕಾರವು, ಮಹತ್ವದ ಕರ್ನಾಟಕ ಸಾರ್ವಜನಿಕ ಪರೀಕ್ಷೆ(ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕ-2023 ಅನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದೆ.
ಪರೀಕ್ಷಾ ಅಕ್ರಮ ನಡೆಸುವವರಿಗೆ 10 ವರ್ಷಗಳ ವರೆಗೆ ಜೈಲು ಶಿಕ್ಷೆ, 10 ಕೋಟಿ ರೂ.ವರೆಗೆ ದಂಡ, ಸ್ವತ್ತು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತಹ ಅಪರಾಧಗಳ ವಿಚಾರಣೆಗಾಗಿ ನ್ಯಾಯಾಲಯಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸುವ ವಿಧೇಯಕ ಇದಾಗಿದೆ.
ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗುವ ಅಭ್ಯರ್ಥಿಗೆ 5 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೆ ದಂಡ ವಿಧಿಸುವುದು ಮತ್ತು ಒಳಸಂಚು ನಡೆಸುವವರಿಗೆ 8 ರಿಂದ 12 ವರ್ಷಗಳ ಕಠಿಣ ಶಿಕ್ಷೆ ಮತ್ತು 15 ಲಕ್ಷ ರೂ.ಗಳಿಂದ 10 ಕೋಟಿ ರೂ.ಗಳವರೆಗೆ ದಂಡ ವಿಧಿಸಲು ಈ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.