ಬೆಳಗಾವಿ, ಡಿ 18 (DaijiworldNews/MR): ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ನಡೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ತಂಡ ಇಂದು ಬೆಳಗ್ಗೆ ಬೆಳಗಾವಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.
ಸಿಐಡಿ ಡಿಐಜಿ ಸುಧೀರ್ ಕುಮಾರ್, ಎಸ್ ಪಿ ಪೃಥ್ವಿಕ್, ರಶ್ಮಿ ಪರಡ್ಡಿ ಹಾಗೂ ಡಿವೈಎಸ್ ಪಿ ಅಂಜಮಳ ನಾಯಕ್ ಸೇರಿದಂತೆ 6 ಅಧಿಕಾರಿಗಳ ತಂಡ ಪ್ರಕರಣದ ತನಿಖೆ ನಡೆಸುತ್ತಿದ್ದು, ಸಂತ್ರಸ್ತೆ ದಾಖಲಾಗಿರುವ ಭಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕುಟುಂಬದವರಿಂದ ಮಾಹಿತಿ ಸಂಗ್ರಹಿಸಿದ್ದಾರೆ.
ಈ ನಡುವೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲ್ ಕುಮಾರ್ ಮೀನಾ ಕೂಡ ಸಂತ್ರಸ್ತೆ ಹಾಗೂ ಕುಟುಂಬದವರನ್ನ ಭೇಟಿಯಾಗಿ ಮಾಹಿತಿ ಪಡೆದಿದ್ದಾರೆ.
ಪ್ರೇಮಿಗಳಿಬ್ಬರು ಮನೆ ಬಿಟ್ಟು ಹೋದರು ಎಂಬ ಕಾರಣಕ್ಕೆ, ಯುವಕನ ತಾಯಿ ಮೇಲೆ ದೌರ್ಜನ್ಯ ಎಸಗಲಾಗಿದೆ. ವಾರದ ಹಿಂದೆ ಘಟನೆ ನಡೆದಿದ್ದು, ಪೊಲೀಸರು ಈಗಾಗಲೇ 11 ಆರೋಪಿಗಳನ್ನು ಬಂಧಿಸಿದ್ದಾರೆ.