ಮೈಸೂರು, ಡಿ 22 (daijiworldNews/SK): ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಉಡುಪು ಅವರವರ ಇಷ್ಟ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು,ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ.
ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ ? ಬಿಜೆಪಿಯವರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿಯ ಹಣ ಪಡೆಯುತ್ತಿಲ್ಲವೇ ? ನಮ್ಮ ಗ್ಯಾರಂಟಿ ಸ್ಕೀಂ ಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದರು.