ಬೆಂಗಳೂರು, ಜ 02 (DaijiworldNews/AA): ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಈ ಹಿನ್ನೆಲೆ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರಿಗೆ ಇನ್ನೂ 4 ದಿನ ಜೈಲು ಶಿಕ್ಷೆ ಅನುಭವಿಸಬೇಕಿದೆ.
ಇಂದು ನಾರಾಯಣ ಗೌಡರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಜನವರಿ 6ರಂದು ಜಾಮೀನು ಬಗ್ಗೆ ಆದೇಶ ಪ್ರಕಟಿಸಲಿದೆ. ಪ್ರಸ್ತುತ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರೊಂದಿಗೆ 32 ಕಾರ್ಯಕರ್ತರು ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕರವೇ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಕರವೇ ಮಹಿಳಾ ಹೋರಾಟಗಾರರ ಕುಟುಂಬದವರಿಗೆ ಕಿರುಕುಳ ನೀಡುತ್ತಿದ್ದು, ಪೊಲೀಸರ ಕುಮ್ಮಕ್ಕಿನಿಂದ ಹೋರಾಟ ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಡಿಸೆಂಬರ್ 27 ರ ರಾತ್ರೋರಾತ್ರಿ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರನ್ನು ಬಂಧಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.