ಬೆಂಗಳೂರು, ಜ 05 (DaijiworldNews/MS):"ಜನರೇ ನಮ್ಮ ಪಾಲಿನ ದೇವರು. ಜನರ ಸಮಸ್ಯೆ ಸರ್ಕಾರದ ಸಮಸ್ಯೆ, ಜನರ ಪರಿಹಾರವೇ ರಾಜ್ಯದ ಪರಿಹಾರ. ಜನರ ಸೇವೆಗೆ ನಾವು ಸದಾ ಬದ್ಧ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಯಲಹಂಕದಲ್ಲಿ ಶುಕ್ರವಾರ ನಡೆದ "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮದಲ್ಲಿ ಮಾತನಾಡಿದ ಅವರು "ಇಲ್ಲಿಗೆ ನಾನೊಬ್ಬನೇ ಬಂದಿಲ್ಲ. ಪೊಲೀಸ್ ಸೇರಿದಂತೆ ಸುಮಾರು 300 ಅಧಿಕಾರಿಗಳು ನಿಮ್ಮ ಸೇವೆಗೆ ಬಂದಿದ್ದೇವೆ.
ನೀವು ನಮಗೆ ಅಧಿಕಾರ ನೀಡಿದ್ದೀರಿ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇನೆ. ಋಣ ತೀರಿಸುವ ವಿಚಾರದಲ್ಲಿ ಭೀಷ್ಮ ಧರ್ಮರಾಯನಿಗೆ ಒಂದು ಮಾತು ಹೇಳುತ್ತಾನೆ. ತಂದೆ ತಾಯಿ, ದೇವರು, ಗುರುಗಳು ಹಾಗೂ ಸಮಾಜ ಈ ನಾಲ್ಕು ಋಣವನ್ನು ನಾವು ತೀರಿಸಬೇಕಂತೆ. ಇವರ ಋಣವನ್ನು ಧರ್ಮದಿಂದ ತೀರಿಸಬೇಕು.
ನಮ್ಮ ಸ್ನೇಹಿತರು ಅನ್ನಭಾಗ್ಯ ಅಕ್ಕಿಯನ್ನು ಮಂತ್ರಾಕ್ಷತೆ ಮಾಡಿ ಹಂಚುತ್ತಿದ್ದಾರೆ. ನಮ್ಮ ಸರ್ಕಾರ ಜನರ ಸಂಕಷ್ಟಗಳಿಗೆ ಪರಿಹಾರ ನೀಡಲು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ.
ಈ ಹಿಂದೆ ಅನೇಕರು ಬೆಂಗಳೂರಿನ ಮಂತ್ರಿಯಾಗಿ ಅವರ ಶೈಲಿಯಲ್ಲಿ ಕೆಲಸ ಮಾಡಿದ್ದಾರೆ. ನಾನು 35 ವರ್ಷಗಳ ಹಿಂದೆ ಶಾಸಕನಾದಾಗ ಪ್ರತಿ ವರ್ಷ ಪ್ರತಿ ಹಳ್ಳಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಅವರ ಕಷ್ಟ ಆಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದೆ. ಅದರಿಂದ ನಮ್ಮ ಮೇಲಿನ ಒತ್ತಡ ಕಡಿಮೆ ಆಗುತ್ತದೆ.
ಪ್ರತಿನಿತ್ಯ ಜನ ನಮ್ಮ ಮನೆ ಬಾಗಿಲಿಗೆ ತಮ್ಮ ಸಮಸ್ಯೆ ಹೊತ್ತುಕೊಂಡು ಬರುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಖ್ಯಮಂತ್ರಿಗಳು ಜನಸ್ಪಂದನ ಕಾರ್ಯಕ್ರಮ ಮಾಡಿ, ಎಲ್ಲಾ ಸಚಿವರಿಗೂ ಸೂಚನೆ ನೀಡಿದ್ದಾರೆ. ನಾನೂ ನನ್ನ ಕ್ಷೇತ್ರ ಹಾಗೂ ಆನೇಕಲ್ ನಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡಿದ್ದೇನೆ.
ಜನ ತಮ್ಮ ಆಸ್ತಿಗಳ ಖಾತೆ ವಿಚಾರ, ಪಿಂಚಣಿ ಸೇರಿದಂತೆ ಸರ್ಕಾರದ ಸವಲತ್ತುಗಳ ಸಮಸ್ಯೆ ಹೊತ್ತು ತರುತ್ತಾರೆ.ಅಧಿಕಾರಿಗಳು ಗೌರವ ನೀಡದಿದ್ದಾಗ ಜನ ರಾಜಕಾರಣಿಗಳ ಬಳಿ ಬರುತ್ತಾರೆ. ಅಧಿಕಾರಿಗಳು ಲಂಚ ಕೇಳಿ ಹಿಂಸೆ ಕೊಟ್ಟಾಗ ಜನ ನಮ್ಮತ್ತ ಬರುತ್ತಾರೆ. ಇಂತಹ ದೂರುಗಳು ಹೆಚ್ಚುತ್ತಿವೆ. ಇವುಗಳನ್ನು ತಪ್ಪಿಸಬೇಕು.
ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯವಾಗಿ ದೂರು ನೀಡಿ. ಯಾರೇ ಆಗಲಿ ನನ್ನ ಹೆಸರು, ಕೃಷ್ಣ ಭೈರೇಗೌಡ, ವಿಶ್ವನಾಥ್, ಪೊಲೀಸ್ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಸೇರಿದಂತೆ ಯಾರ ಹೆಸರಲ್ಲಿ ಹಣ ಕೇಳಿದರೂ ನಮ್ಮ ಗಮನಕ್ಕೆ ತನ್ನಿ, ನಾವು ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ.
ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿವೆ. ಅನ್ನಭಾಗ್ಯ ಯೋಜನೆಯಲ್ಲಿ 5 ಕೆ.ಜಿ ಅಕ್ಕಿ, 5 ಕೆ.ಜಿ ಅಕ್ಕಿಯ ಹಣ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಅಕ್ಕಿ ಪೂರೈಸದಿದ್ದರೆ ನಾವೇ ಟೆಂಡರ್ ಕರೆದು ಅಕ್ಕಿ ಖರೀದಿ ಮಾಡಿ ಅದನ್ನು ವಿತರಣೆ ಮಾಡುತ್ತೇವೆ. ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ವರೆಗೂ ವಿದ್ಯುತ್ ಉಚಿತ ಸಿಗುತ್ತಿದೆ. ಶೂನ್ಯ ಬಿಲ್ ಬರುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಯಿಂದ 5 ಲಕ್ಷ ಮಹಿಳೆಯರಿಗೆ ಹಣ ಸಿಕ್ಕಿಲ್ಲ. ಕೆಲವರು ಪತ್ನಿ ಹೆಸರಲ್ಲಿ ಅರ್ಜಿ ಹಾಕಿ ಪತಿಯ ದೂರವಾಣಿ ಹಾಗೂ ಬ್ಯಾಂಕ್ ಖಾತೆ ನೀಡಿದ್ದಾರೆ. ಮತ್ತೆ ಕೆಲವು ಕಡೆ ನೋಂದಣಿ ಮಾಡುವವರು ಜನರ ಬಳಿ ದೂರವಾಣಿ ಸಂಖ್ಯೆ ಇಲ್ಲ ಎಂದರೆ ತಮ್ಮ ಸಂಖ್ಯೆ ನೀಡಿದ್ದಾರೆ. ಇದರಿಂದಾಗಿ ಹಲವರಿಗೆ ಹಣ ತಲುಪಿಲ್ಲ ಎಂದು ಹೇಳಿದ್ದಾರೆ.