ಬೆಳಗಾವಿ , ಜ 08 (DaijiworldNews/MS):ಕಾರದಗಾ ಗ್ರಾಮದಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು” ಎಂದು ಅವರು ಹೇಳಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ತಮ್ಮ ಹೇಳಿಕೆ ವಿವಾದವಾಗುತ್ತಿದ್ದಂತೆ ಎಚ್ಚೆತ್ತ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟೀಕರಣ ನೀಡಿದ್ದು, ತಾವು ಆ ಅರ್ಥದಲ್ಲಿ ಹೇಳಿದ್ದಲ್ಲ ಎಂದಿದ್ದಾರೆ.
ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟೀಕರಣ ನೀಡಿದ್ದು"ನಾನು ಕಾರದಗಾದ ಕನ್ನಡ ಸಮಾವೇಶದಲ್ಲಿ ಆಡಿದ ಮಾತುಗಳಿಗೆ ಸ್ಪಷ್ಟನೆ ನೀಡಬಯಸುತ್ತೇನೆ. ನಾನು ಹೆಮ್ಮೆಯ ಕನ್ನಡತಿಯಾಗಿ, ಕನ್ನಡದ ಮೇಲೆ ವಿಶೇಷವಾದ ಅಭಿಮಾನ ಇಟ್ಟುಕೊಂಡು ಗಡಿ ಭಾಗದಲ್ಲಿ ಇಷ್ಚೊಂದು ಉತ್ಸಾಹದಿಂದ ಅಲ್ಲಿನ ಕನ್ನಡಿಗರು - ಮರಾಠಿ ಭಾಷಿಕರೆಲ್ಲ ಸೇರಿ ಕನ್ನಡ ಸಮಾವೇಶ ನಡೆಸುತ್ತಿರುವುದನ್ನು ತಿಳಿದು, ಅವರ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮತ್ತು ಅವರಲ್ಲಿ ಉತ್ಸಾಹ ತುಂಬುವ ಉದ್ದೇಶದಿಂದ ಅಲ್ಲಿನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದೇನೆ. ಕನ್ನಡಿಗರಿಗೆ ಸ್ಫೂರ್ತಿ ತುಂಬುವ ಭರದಲ್ಲಿ ಅಲ್ಲಿ ನಾನು ಆಡಿದ ಮಾತುಗಳ ಸಕಾರಾತ್ಮಕತೆಯನ್ನು ಅರ್ಥೈಸಿಕೊಳ್ಳಬೇಕೆಂದು ಮಾಧ್ಯಮದ ಸ್ನೇಹಿತರಲ್ಲಿ ವಿನಂತಿಸುತ್ತೇನೆ. ಇದರ ಬದಲಾಗಿ ಬೇರೆ ರೀತಿಯಲ್ಲಿ ಅರ್ಥೈಸುವುದರಿಂದ ಅದು ಗಡಿಭಾಗದ ಕನ್ನಡಿಗರ ಉತ್ಸಾಹಕ್ಕೆ ಹಿನ್ನಡೆಯನ್ನುಂಟು ಮಾಡಬಹುದು.
ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಸಹ ಮುಂಬೈ ಪ್ರಾಂತ್ಯದಲ್ಲಿತ್ತು, ಹಿಂದಿನಿಂದಲೂ ಕನ್ನಡಿಗರು - ಮರಾಠಿ ಭಾಷಿಕರು ಅನ್ಯೋನ್ಯತೆಯಿಂದ ಬಾಳುತ್ತಿದ್ದೇವೆ. ಈ ಅನ್ಯೋನ್ಯತೆ ಮುಂದುವರಿಯಬೇಕು ಎನ್ನುವ ಆಶಯವನ್ನು ನಾನು ವ್ಯಕ್ತಪಡಿಸಿದ್ದೇನೆ. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರ ರಾಜ್ಯವೇ ಅಸ್ಥಿತ್ವದಲ್ಲೇ ಇಲ್ಲದ್ದರಿಂದ ಅಂತಹ ಅರ್ಥ ಕಲ್ಪಿಸುವ ಪ್ರಶ್ನೆಯೇ ಬರುವುದಿಲ್ಲ. ಕಾರದಗಾ ಕನ್ನಡ ಸಮಾವೇಶಕ್ಕೆ ಮುಂದಿನ ವರ್ಷದಿಂದ ರಾಜ್ಯ ಸರಕಾರದ ಆರ್ಥಿಕ ಸಹಾಯ ಒದಗಿಸುವ ಮತ್ತು ಅಲ್ಲಿನ ಸಂಘಟನೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡಿಸಲು ಪ್ರಯತ್ನಿಸುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡುವ ಮೂಲಕ ಅವರ ಉತ್ಸಾಹವನ್ನು ಹೆಚ್ಚಿಸಿದ್ದೇನೆ. ಅವರ ಉತ್ಸಾಹವನ್ನು ನಾವು, ನೀವೆಲ್ಲ ಸೇರಿ ಇನ್ನಷ್ಟು ಹೆಚ್ಚಿಸೋಣ, ಬರುವ ವರ್ಷಗಳಲ್ಲಿ ಈ ಸಮಾವೇಶ ಇನ್ನಷ್ಟು ಅದ್ಧೂರಿಯಾಗಿ ನಡೆಯುವಂತೆ ಮಾಡೋಣ ಎಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.