ಬೆಂಗಳೂರು, ಫೆ 06 (DaijiworldNews/MS): ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್ಡಿ)ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳಲ್ಲೂ ಈ ಕುರಿತು ಸುದ್ದಿ ಪ್ರಕಟವಾದರೂ ಸರಕಾರ ಎಚ್ಚೆತ್ತುಕೊಳ್ಳಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೋಗ ಹರಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಮತ್ತು ಎರಡು ಸಾವು ಸಂಭವಿಸಿದ ಬಳಿಕ ಸುದೀರ್ಘ ನಿದ್ದೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿತು. ಆ ಬಳಿಕವಷ್ಟೇ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಧಾವಿಸಿ ಸಭೆ ನಡೆಸುವ ಶಾಸ್ತ್ರ ಮಾಡಿದ್ದಾರೆ ಎರಡು ತಿಂಗಳ ಮೊದಲೇ ಎಚ್ಚೆತ್ತುಕೊಂಡಿದ್ದಿದ್ದರೆ ಅಮಾಯಕ ಜೀವಗಳನ್ನು ಉಳಿಸಿಕೊಳ್ಳಬಹುದಿತ್ತು ಎಂದುಇಲಾಖೆ ಕಾರ್ಯವೈಖರಿಗೆ ಕಿಡಿಕಾರಿದ್ದಾರೆ.
ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಮತ್ತು ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಮಂಗನಕಾಯಿಲೆ ಕಾಣಿಸಿಕೊಳ್ಳುವುದು ವಾಡಿಕೆ. ಕಳೆದ 66 ವರ್ಷಗಳಿಂದ ಈ ರೋಗ ಕಾಡುತ್ತಿದೆ. ಇದು ಗೊತ್ತಿದ್ದರೂ ಇಲಾಖೆ ಕಾಲಾಹರಣ ಮಾಡಿದೆ. ಇದರಿಂದಾಗಿಯೇ ಇವತ್ತು ಆತಂಕಕಾರಿ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ಕೆ ಎಫ್ ಡಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಇದಕ್ಕೆ ಇಲಾಖೆಯ ನಿರ್ಲಕ್ಷ್ಯ ಕಾರಣ. ಹೀಗಾಗಿ ಸಾವಿನ ನೈತಿಕ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು. ಆ ಕುಟುಂಬದ ಒಬ್ಬ ವ್ಯಕ್ತಿಗೆ ಸರಕಾರದ ಉದ್ಯೋಗ ನೀಡಬೇಕು ಮತ್ತು ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.