ಕೊಲ್ಕತ್ತಾ,ಫೆ 09 (DaijiworldNews/ AK): ಪಶ್ಚಿಮ ಬಂಗಾಳ ಜೈಲಿನಲ್ಲಿರುವ ಮಹಿಳಾ ಕೈದಿಗಳು ಗರ್ಭಿಣಿಯರಾಗುತ್ತಿದ್ದು ರಾಜ್ಯದ ವಿವಿಧ ಜೈಲುಗಳಲ್ಲಿ ಸುಮಾರು 196 ಶಿಶುಗಳು ಜನಿಸಿವೆ ಎಂದು ಕೋಲ್ಕತ್ತಾ ಹೈಕೋರ್ಟ್ಗೆ ಗುರುವಾರ ಮಾಹಿತಿ ನೀಡಲಾಗಿದೆ.
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಜೈಲು ಸುಧಾರಣೆಗಳು ಮತ್ತು ಸುಧಾರಣಾ ಗೃಹಗಳಿಗೆ ಸಂಬಂಧಿಸಿದ ಪ್ರಕರಣವನ್ನು ಉಲ್ಲೇಖಿಸುವಾಗ ಅಮಿಕಸ್ ಕ್ಯೂರಿ ಈ ಹೇಳಿಕೆ ನೀಡಿದ್ದಾರೆ.
ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಸುಪ್ರತಿಮ್ ಭಟ್ಟಾಚಾರ್ಯ ಅವರಿದ್ದ ವಿಭಾಗೀಯ ಪೀಠ ಮುಂದಿನ ಸೋಮವಾರ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ವಿಭಾಗೀಯ ಪೀಠದ ಎದುರು ಪ್ರಕರಣ ಪ್ರಸ್ತಾಪಿಸುವಂತೆ ಸೂಚಿಸಿದೆ.
ಈ ಅವಘಡ ತಡೆಗಟ್ಟಲು ಸುಧಾರಣಾ ಗೃಹಗಳ ಪುರುಷ ಉದ್ಯೋಗಿಗಳು ಮಹಿಳಾ ಕೈದಿಗಳಿರುವ ಆವರಣ ಪ್ರವೇಶಿಸುವುದನ್ನು ನಿಷೇಧಿಸಬೇಕು ಎಂದು ಅಮಿಕಸ್ ಸಲಹೆ ನೀಡಿದರು. ಅವರು ನೀಡಿರುವ ಸಲಹೆ, ಮಾಹಿತಿಯನ್ನು ನ್ಯಾಯಾಲಯ ದಾಖಲಿಸಿಕೊಂಡಿದೆ.
ತಾನು ಸುಧಾರಣಾ ಗೃಹವೊಂದಕ್ಕೆ ಭೇಟಿ ನೀಡಿದ್ದೆ, ಅಲ್ಲಿ ಒಬ್ಬ ಮಹಿಳೆ ಗರ್ಭಿಣಿಯಾಗಿರುವುದನ್ನು ಕಂಡೆ. ಜೈಲಿನಲ್ಲಿ ಜನಿಸಿದ 15 ಮಕ್ಕಳು ಕೂಡ ಈ ಸುಧಾರಣಾ ಗೃಹದಲ್ಲಿದ್ದರು ಎಂದು ಅಮಿಕಸ್ ಅವರು ಈ ಸಂದರ್ಭದಲ್ಲಿ ವಿವರಿಸಿದ್ದಾರೆ.