ಬೆಂಗಳೂರು, ಫೆ 10(DaijiworldNews/AA): ಸಂಸದ ಡಿ.ಕೆ.ಸುರೇಶ್ ಮತ್ತು ವಿನಯ್ ಕುಲಕರ್ಣಿ ಅವರಿಗೆ ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಕೆ.ಎಸ್ ಈಶ್ವರಪ್ಪ ಅವರ ವಿರುದ್ಧ ಆರ್ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರು ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ.
ಇನ್ನು ಕೆ.ಎಸ್ ಈಶ್ವರಪ್ಪ ಅವರ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 09 ರಂದು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗುವ ಮೂಲಕ ಕೆ.ಎಸ್ ಈಶ್ವರಪ್ಪ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ಇನ್ನು ದಾವಣಗೆರೆ ಪೊಲೀಸರು ಕೆ.ಎಸ್ ಈಶ್ವರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಶಿವಮೊಗ್ಗದಲ್ಲಿರುವ ಅವರ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.