ನವದೆಹಲಿ, ಫೆ 13 (DaijiworldNews/AA): ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ವಿವಿಧ ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಕೂಡ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಇದೀಗ ಇದರ ಬೆನ್ನಲ್ಲೇ ಸೋನಿಯಾ ಗಾಂಧಿ ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.
ನಾಳೆ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿರುತ್ತಾರೆ ಎನ್ನಲಾಗುತ್ತಿದೆ. ಆದರೆ ಸೋನಿಯಾ ಗಾಂಧಿ ಅವರು ಯಾವ ರಾಜ್ಯದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬುದು ತಿಳಿದುಬಂದಿಲ್ಲ. ಯಾವ ರಾಜ್ಯದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದು ಇಂದು ರಾತ್ರಿಯ ಒಳಗೆ ಅಂತಿಮವಾಗಲಿದೆ ಎಂದು ತಿಳಿದುಬಂದಿದೆ.
ಇನ್ನು ಸೋನಿಯಾ ಗಾಂಧಿ ಅವರು ರಾಜ್ಯಸಭಾ ಚುನಾವಣೆಗೆ ಕಣಕ್ಕಿಳಿಯುವ ವಿಷಯವು ಸಾಕಷ್ಟು ದಿನಗಳಿಂದ ಚರ್ಚೆಯಲ್ಲಿತ್ತು. ಅದರಂತೆ ಅವರು ತೆಲಂಗಾಣ ರಾಜ್ಯ ಅಥವಾ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸುವ ಸುದ್ದಿ ಆಗಾಗ ಹರಿದಾಡುತ್ತಿತ್ತು. ಆದರೆ ಇದೀಗ ಅವರು ಯಾವ ರಾಜ್ಯದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬುದು ಬಹಿರಂಗವಾಗಿಲ್ಲ.