ಬೆಂಗಳೂರು, ಫೆ 14 (DaijiworldNews/PC): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಫೆ 27ರಂದು ನಡೆಯಲಿದ್ದು ಈ ಸಮ್ಮೇಳದಲ್ಲಿ ಭಾಗವಹಿಸಲಿರುವ ನೌಕರರಿಗೆ 2 ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಫೆ 27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರ ನಡೆಯಲಿದ್ದು ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಬೆಂಗಳೂರು ನೌಕರರಿಗೆ ಫೆ.27ರಂದು ರಜೆ ನೀಡಿದರೆ, ಇತರೆ ಬೇರೆ-ಬೇರೆ ಜಿಲ್ಲೆಗಳಿಂದ ಬರುವ ನೌಕರರಿಗೆ ಎರಡು ದಿನ ಅಂದರೆ ಫೆ.27 ಮತ್ತು 28ರಂದು ರಜೆ ನೀಡಲಾಗಿದೆ.
ಈ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಸರ್ಕಾರಿ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ನಂತರ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು.
ಈ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳು, ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡತಕ್ಕದ್ದು ಎಂದು ಸೂಚನೆ ನೀಡಲಾಗಿದೆ.