ಬೆಂಗಳೂರು, ಫೆ 15(DaijiworldNews/SK): ದೆಹಲಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಕಾನೂನು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆಗಳು ‘ದೆಹಲಿ ಚಲೋ’ವನ್ನು ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರೈತರನ್ನು ಮಧ್ಯಪ್ರದೇಶದ ಭೂಪಾಲ್ ನಲ್ಲಿ ಬಂಧನ ಮಾಡಲಾಗಿದ್ದು, ಅವರ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತಾಗಿ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರಿಗೆ ಪತ್ರ ಬರೆದ ಸಿದ್ದರಾಮಯ್ಯ ಅವರು, ಯಾವುದೇ ಕಾರಣ ಇಲ್ಲದೆ ರೈತರನ್ನು ಬಂಧಿಸಿರುವುದು ಖಂಡನೀಯ. ನಾಲ್ಕು ದಿನಗಳಾದರೂ ರೈತರ ಬಿಡುಗಡೆ ಆಗಿಲ್ಲ. ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ, ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಬಂಧಿಸಲಾದ ರೈತರನ್ನು ವಾರಣಾಸಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ. ತಮ್ಮ ಹಕ್ಕುಗಳ ಈಡೇರಿಕೆಗಾಗಿ ರೈತರಿಗೆ ಹೋರಾಟ ಮಾಡಲು ಅವಕಾಶವಿದೆ. ಆದರೆ ಅಂತಹ ರೈತರನ್ನು ಬಂಧನ ಮಾಡುವ ಕ್ರಮ ಸರಿಯಲ್ಲ. ಈ ನಿಟ್ಟಿನಲ್ಲಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.