ನವದೆಹಲಿ,ಫೆ 15 (DaijiworldNews/MS): ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ.
ಫಾರೂಕ್ ಅಬ್ದುಲ್ಲಾ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾತುಕತೆ ವಿಫಲವಾದ ಹಿನ್ನೆಲೆ ನ್ಯಾಷನಲ್ ಕಾನ್ಫರೆನ್ಸ್ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ಅದರ ಅರ್ಹತೆಯ ಆಧಾರದ ಮೇಲೆ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಗುರುವಾರ ಹೇಳಿದ್ದು ಎನ್.ಡಿ.ಎ ತೆಕ್ಕೆಗೆ ಮರಳುವ ಸಾಧ್ಯತೆಯ ಬಗ್ಗೆಯೂ ಸುಳಿವು ನೀಡಿದ್ದಾರೆ.
ಕಳೆದ ತಿಂಗಳು, ಜಮ್ಮು ಪ್ರದೇಶದ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ನ ಹಲವಾರು ಪ್ರಮುಖ ನಾಯಕರು ಬಿಜೆಪಿಗೆ ಸೇರಿದರು.2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಅಬ್ದುಲ್ಲಾ ಅವರ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ತಲಾ ಮೂರು ಸ್ಥಾನಗಳನ್ನು ಗೆದ್ದಿವೆ.