ಬೆಳಗಾವಿ, ಫೆ 20(DaijiworldNews/SK): ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ 3600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ ಜೋಶಿ ಅವರು, ಭಾರತದ ಯುವ ಜನತೆಗೆ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಿ ದೇಶವನ್ನು ವಿಶ್ವಗುರುವಾಗಿ ಬದಲು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ವಿದ್ಯಾರ್ಥಿಗಳ ಅಮೂಲ್ಯ ಜೀವನ ರೂಪಿಸಲು ಪ್ರಧಾನಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಪ್ರಧಾನಮಂತ್ರಿ ಉಷಾ ಯೋಜನೆಯಡಿ 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನ ನೀಡಿದ್ದು, ಸೋಮವಾರವೇ ಈ ಎಲ್ಲ ಅನುದಾನಗಳನ್ನು ಬಿಡುಗಡೆ ಮಾಡಿದ್ದಾರೆ.
ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ, ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ದೊರೆಯಲಿದೆ ಎಂದು ತಿಳಿಸಿದ್ದಾರೆ.