ಬೆಂಗಳೂರು ,ಫೆ 21 (DaijiworldNews/ AK): ರಾಜ್ಯದ ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ರಾಷ್ಟ್ರ ಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮೊದಲು ಹಾಡುವುದು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ಸರಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಆಯೋಜಿಸುವ ಆರಂಭದಲ್ಲಿ ನಾಡಗೀತೆಯನ್ನು ಹಾಡಬೇಕೆಂದು ಸರಕಾರ ತಿದ್ದುಪಡಿ ಆದೇಶದಲ್ಲಿ ತಿಳಿಸಿದೆ.
ಇಂದು ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ರಾಜ್ಯ ಸರಕಾರ ಹೊರಡಿಸಿತ್ತು. ರಾಷ್ಟ್ರ ಕವಿ ಕುವೆಂಪುರವರ ‘ಜಯ ಭಾರತ ‘ಜಯ ಭಾರತ ಜನನಿಯ ತನುಜಾತೆ’ ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರಕಾರದ ಆದೇಶ ಹಾಗೂ ಅದಕ್ಕೆ ಫೆ.1ರಂದು ಮಾಡಲಾದ ತಿದ್ದುಪಡಿ ಪ್ರಕಾರ, ‘ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂಬುದಾಗಿ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿತ್ತು.