ಬೆಂಗಳೂರು, ಫೆ 28(DaijiworldNews/MS): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾರೆ. ಇದು ಪಾಕಿಸ್ತಾನ ಬೆಂಬಲಿಗರಿಗೆ ಕಾಂಗ್ರೆಸ್ ಪಕ್ಷದ ಸಹಾಯ, ಬೆಂಬಲ ಇದೆ ಎಂಬುದನ್ನು ತೋರಿಸುತ್ತದೆ.ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು. ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ, ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದ್ದಾರೆ.
ಇನ್ನು ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಕೂಡಾ ಕಿಡಿಕಾರಿದ್ದು, "ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು ಈ ಘಟನೆ ಕರ್ನಾಟಕ ಪಕ್ಷದ ವಿಕೃತ, ದೇಶದ್ರೋಹಿ ಮನಸ್ಥಿತಿಯನ್ನು ಪ್ರದರ್ಶನ ಮಾಡಿದೆ.
ಚುನಾವಣೆಯಲ್ಲಿ ಗೆದ್ದಿದ್ದರೆ ನಿಮ್ಮ ಅಭ್ಯರ್ಥಿಗಳಿಗೆ ಜೈಕಾರ ಹಾಕಿ, ನಿಮ್ಮ ಪಕ್ಷಕ್ಕೆ ಜೈಕಾರ ಹಾಕಿ, ನಿಮ್ಮ ನಾಯಕರಿಗೆ ಜೈಕಾರ ಹಾಕಿ, ಅದು ಬಿಟ್ಟು ಪಾಕಿಸ್ತಾನ ಜಿಂದಾಬಾದ್ ಎಂದು ನಿಮ್ಮ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗುತ್ತಾರಲ್ಲ ಸಿಎಂ ಸಿದ್ದರಾಮಯ್ಯ ಅವರೇ, ಮೂರು ರಾಜ್ಯಸಭೆ ಸ್ಥಾನ ಗೆದ್ದ ಮಾತ್ರಕ್ಕೆ ಮತೊಮ್ಮೆ ದೇಶ ವಿಭಜನೆ ಮಾಡಬಹುದು ಎಂದು ಕೊಂಡಿದ್ದೀರಾ?ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ ಡಿ.ಕೆ ಶಿವಕುಮಾರ್ ಅವರೇ" ಎಂದು ಪ್ರಶ್ನಿಸಿದ್ದಾರೆ