ಬೆಂಗಳೂರು, ಫೆ 28(DaijiworldNews/AA): ಕನ್ನಡ ಭಾಷೆಯಲ್ಲಿ ಯುಪಿಎಸ್ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಹಾಗೂ ನಟ ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕೆ.ಶಿವರಾಮ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಹಲವು ದಿನಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಶಿವರಾಮ್ ಅವರು ಐಎಎಸ್ ಅಧಿಕಾರಿಯಾಗಿ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. ಬಳಿಕ ಬಾ ನಲ್ಲೆ ಮಧುಚಂದ್ರಿಕೆ, ವಸಂತ ಕಾವ್ಯ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿರುವ ಅವರು ಸಾಂಗ್ಲಿಯಾನ 3 ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿದ್ದಾರೆ.