ಬೆಂಗಳೂರು, ಫೆ 29(DaijiworldNews/AA): ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ 7 ಜನರನ್ನು ವಿಚಾರಣೆ ನಡೆಸಲಾಗಿದೆ ಹಾಗೂ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.
ಇಂದಿನ ವಿಧಾನಸಭಾ ಬಜೆಟ್ ಅಧಿವೇಶನ ಕಾರ್ಯಕಲಾಪಗಳು ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಆರ್ ಅಶೋಕ್ ಅವರ ನೇತೃತ್ವದಲ್ಲಿ ವಿರೋಧ ಪಕ್ಷದ ಶಾಸಕರು ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದಸ್ಯರು ತಮ್ಮ ತಮ್ಮ ಸ್ಥಾನಗಳಿಗೆ ಹೋಗಿ ಕುಳಿತುಕೊಳ್ಳುವಂತೆ ವಿಪಕ್ಷ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ಈ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಪಾಕ್ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಇನ್ನು ಪಾಕ್ ಪರ ಘೋಷಣೆ ಕೂಗಿದವನ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೇಶಭಕ್ತಿಯ ಪಾಠವನ್ನು ತಾವು ಬೆಜೆಪಿಯವರಿಂದ ಕಲಿಯಬೇಕಿಲ್ಲ. ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರಿಗಿಂತ 100 ಪಟ್ಟು ಹೆಚ್ಚು ದೇಶಭಕ್ತರು ಎಂದು ಅವರು ಕಿಡಿಕಾರಿದ್ದಾರೆ.
ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ವಿಪಕ್ಷ ಸದಸ್ಯರು, ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ 48 ಗಂಟೆ ಕಳೆದರೂ ಸರ್ಕಾರ ಇದುವರೆಗೂ ಒಬ್ಬೇ ಒಬ್ಬ ವ್ಯಕ್ತಿಯನ್ನು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಪೀಕರ್ ಯುಟಿ ಖಾದರ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಹೇಳಿದರೂ ವಿಪಕ್ಷ ಸದಸ್ಯರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.