ಚಾಮರಾಜನಗರ ಮಾ 12(DaijiworldNews/AA): ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಿಗೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ. ಸಂವಿಧಾನದ ಆಶಯಕ್ಕೆ ತಕ್ಕಂತೆ ಕಾಂಗ್ರೆಸ್ ಕಾರ್ಯಕ್ರಮಗಳನ್ನು ರೂಪಿಸಿದ್ದು ಗ್ಯಾರಂಟಿಗಳನ್ನು ನೀಡಿದೆ. ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಏಕೈಕ ಸರ್ಕಾರ ನಮ್ಮದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿಗೊಳಿಸಿದ್ದೇವೆ. 36000 ಕೋಟಿ ರೂ. ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿಗಳಿಗೆ ನಾಲ್ಕೂವರೆ ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ರಾಜ್ಯದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 45 ಸಾವಿರದಿಂದ 50 ಸಾವಿರ ರೂ. ನೀಡುತ್ತಿದ್ದೇವೆ. ಇದನ್ನು ಬಿಜೆಪಿ ಯಾಕೆ ವಿರೋಧಿಸುತ್ತಿದೆ? ನಾಡಿನ ಜನರಿಗೆ ಸರ್ಕಾರದ ಸವಲತ್ತುಗಳು ಸಿಗಬಾರದಾ? ಎಂದು ಪ್ರಶ್ನಿಸಿದ್ದಾರೆ.
1 ಕೋಟಿ 20 ಲಕ್ಷ ಕುಟುಂಬಗಳ, ನಾಲ್ಕೂವರೆ ಕೋಟಿ ಜನಕ್ಕೆ ಈ ವರ್ಷ 36000 ಕೋಟಿ ಹಣ ನೀಡಿದ್ದೇವೆ. ಮುಂದಿನ ವರ್ಷಕ್ಕೆ 59000 ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ರಾಜ್ಯದ ಜನರ ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷ 20 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ. ಇನ್ನು ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಡನಂಬಿಕೆ ಜಿಲ್ಲೆಯ ಜನರಿಗೆ ಮಾಡುವ ಅವಮಾನ. ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ ಎಂದು ಹೇಳಿದ್ದಾರೆ.