ಹೈದರಾಬಾದ್, ಮಾ 18(DaijiworldNews/AA): ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರು ಇಂದು ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಸೌಂದರ್ಯರಾಜನ್ ಅವರು ಸ್ಪರ್ಧಿಸುವ ಸಾಧ್ಯತೆ ಇರುವ ಹಿನ್ನೆಲೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಸೌಂದರ್ಯರಾಜನ್ ಅವರು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ ಎಂದು ರಾಜಭವನದ ಅಧಿಕೃತ ಪ್ರಕಟಣೆ ತಿಳಿಸಿದೆ.
ಸೌಂದರ್ಯರಾಜನ್ ಅವರು ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದು, ಬಿಜೆಪಿಯ 3ನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೌಂದರ್ಯರಾಜನ್ ಅವರ ಹೆಸರಿರುವ ಸಾಧ್ಯತೆ ಇದೆ. ಹೀಗಾಗಿ ತಮ್ಮ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಉತ್ತರ ತಮಿಳುನಾಡು, ಪುದುಚೇರಿ ಅಥವಾ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಸೌಂದರ್ಯರಾಜನ್ ಅವರು ದಕ್ಷಿಣ ತಮಿಳುನಾಡಿನ ತೂತುಕುಡಿ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಅವರು ಡಿಎಂಕೆಯ ಕನಿಮೋಳಿ ವಿರುದ್ಧ ಸೋಲನ್ನು ಕಂಡಿದ್ದರು.