ಹುಬ್ಬಳ್ಳಿ, ಮಾ 19(DaijiworldNews/AK): ರಾಜ್ಯದಲ್ಲಿ ಹಿಂದೂ , ದೇಶ ವಿರೋಧಿ ಕೃತ್ಯಗಳು ಹೆಚ್ಚುತ್ತಿದ್ದು, ಇದಕ್ಕೆ ನೇರ ಹೊಣೆ ಕಾಂಗ್ರೆಸ್ ಸರ್ಕಾರವೇ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಏಕೆ ಹೀಗೆ ಹಿಂದೂ ವಿರೋಧಿ ಕೃತ್ಯಗಳು ನಡೆಯುತ್ತದೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯೇ ಕಾರಣ ಎಂದು ಆರೋಪಿಸಿದರು.
ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಎಫ್ ಎಸ್ ಎಲ್ ವರದಿ ಬಂದರೂ ಯಾವುದೇ ಕ್ರಮವಿಲ್ಲ.ರಾಮೇಶ್ವರ ಕೆಫೇ ಬಾಂಬ್ ಸ್ಪೋ ಟ ಪ್ರಕರಣ ನಡೆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ನಡೆದಿದೆ. ಅಂದರೆ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪಾಕಿಸ್ತಾನ ಜಿಂದಾಬಾದ್ ಮತ್ತು ಬಾಂಬ್ ಸ್ಪೋ ಟ ಪ್ರಕರಣದಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ. ಇಂಥ ಅಹಿತಕರ ಘಟನೆಗಳ ವಿರುದ್ಧ ಏನು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಈಗಲೂ ಬಾಯಿ ಬಿಡುತ್ತಿಲ್ಲ. ಇದರಿಂದ ದುಷ್ಕರ್ಮಿಗಳಿಗೆ ಬೆಂಬಲ ಸಿಕ್ಕಂತಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.