ಬೆಂಗಳೂರು,ಏ 04(DaijiworldNews/AK): ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಜಯನಗರನಿಂದ ರೋಡ್ ಶೋ ಮೂಲಕ ಹೊರಟು ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಪ್ರತಾಪ ಸಿಂಹ, ರಾಜ್ಯಸಭಾ ಸದಸ್ಯ ಜಗ್ಗೇಶ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ವಿಧಾನಪರಿಷತ್ ಸದಸ್ಯ ಶರವಣ, ಜೆಡಿಎಸ್ ಬೆಂಗಳೂರು ಮಹಾನಗರ ಅಧ್ಯಕ್ಷ ರಮೇಶ್ ಗೌಡ, ಜೆಡಿಎಸ್ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ತುಳಸಿರಾಮ್ ಅವರು ಹಾಜರಿದ್ದರು
ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಗಿರಿನಗರದ ಶ್ರೀ ಗಣೇಶ ದೇವಸ್ಥಾನದಲ್ಲಿ ಕುಟುಂಬದೊಂದಿಗೆ ಪೂಜೆ ಸಲ್ಲಿಸಿದರು. ಗಿರಿನಗರದ ಭಾಗದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿ ಶುಭ ಹಾರೈಸಿದರು.
ಇಂದು ಅವರು ಹಿರಿಯರು ಹಾಗೂ ಹಿತೈಷಿಗಳ ಆಶೀರ್ವಾದ ಪಡೆದರು. ನರೇಂದ್ರ ಮೋದಿಯವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಬೆಂಗಳೂರು ದಕ್ಷಿಣ ಕ್ಷೇತ್ರದ ಜನತೆಯ ಉತ್ಸಾಹ, ಹುಮ್ಮಸ್ಸು ಪ್ರೇರಣಾದಾಯಿ ಆಗಿದೆ ಎಂದು ತೇಜಸ್ವಿ ಸೂರ್ಯ ಅವರು ತಿಳಿಸಿದರು.