ಬೆಂಗಳೂರು,ಮೇ 16 (DaijiworldNews/ AK): ಬೆಂಗಳೂರು ವಿಧಾನಪರಿಷತ್ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಾಮೋಜಿ ಗೌಡ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮತದಾರರಿಗೆ ಆಮಿಷ ಒಡ್ಡುವ ಸಲುವಾಗಿ ಗಿಫ್ಟ್ಗಳನ್ನು ಹಂಚುತ್ತಿದ್ದಾರೆ ಎಂದು ಬಿಜೆಪಿ ನಿಯೋಗ ಆಕ್ಷೇಪಿಸಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಇಂದು ಬಿಜೆಪಿ ನಿಯೋಗವು ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿತು.
ಖಾಸಗಿ ಕೊರಿಯರ್ ಏಜೆನ್ಸಿಯ ಗೋದಾಮಿನಲ್ಲಿ ಈ ಉಡುಗೊರೆಗಳನ್ನು ಶೇಖರಿಸಿ ಇಡಲಾಗಿದೆ. ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸುವಂತೆ ನಿಯೋಗ ಕೋರಿದೆ.
ನಿಯೋಗದಲ್ಲಿ ಶಾಸಕ ಎಸ್.ಸುರೇಶ್ ಕುಮಾರ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.