ಬೆಂಗಳೂರು, ಮೇ. 17(DaijiworldNews/AK): ದೇಶದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ ಎಂದರು.
ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಜನರಿಗೆ ವಿವರಿಸಿದ್ದೇವೆ. ಜನರು ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.