ಬೆಂಗಳೂರು, ಮೇ 19(DaijiworldNews/AA): ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಹಾಗೂ ವಕೀಲ ದೇವರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇಂದು ವೈರಲ್ ಆಗಿದೆ. ಈ ಆಡಿಯೋದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ. ಇದನ್ನು ಖಂಡಿಸಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಎಲ್ ಆರ್ ಶಿವರಾಮೇಗೌಡ ವಿರುದ್ಧ ಜೆಡಿಎಸ್ ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ರಾಜ್ಯ ಕಾಂಗ್ರೆಸ್ ದುರಾಡಳಿತ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಿತೂರಿ ಹಾಗೂ ಕುಮ್ಮಕ್ಕಿನಿಂದ ಎಲ್ ಆರ್ ಶಿವರಾಮೇಗೌಡ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರ ವಿರುದ್ಧವಾಗಿ ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಮತ್ತು ಎಲ್ ಆರ್ ಶಿವರಾಮೇಗೌಡರ ವಿರುದ್ಧ ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ನಾಳೆ ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕರು ಹಾಗೂ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಪ್ರಕಟಣೆ ಹೊರಡಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.