ಬೆಂಗಳೂರು, ಮೇ 28 (DaijiworldNews/MS): ಬೆಂಗಳೂರಿನ ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗಾಲಯಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿ, ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ NALನ CSIR ಕ್ಯಾಂಪಸ್ ಗೂ ಭೇಟಿ ನೀಡಿ LCA ಘಟಕಗಳು ಮತ್ತು ಸರಸ್ ಪ್ರದರ್ಶನ ವೀಕ್ಷಿಸಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಎನ್ ಎಎಲ್ ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ಜಗದೀಪ್ ಧನಕರ್, ಎನ್ ಎಎಲ್ ಅತ್ಯುತ್ತಮ ಕೆಲಸ ಮಾಡುತ್ತಿದೆ. ಭಾರತ ಒಂದು ಅವಕಾಶಗಳ ತಾಣ. ಈಗಾಗಲೇ ಹಲವಾರು ಪೈಲಟ್ ಗಳಿಗೆ ತರಬೇತಿ ನೀಡಿ, ಅವರನ್ನು ಸಜ್ಜುಗೊಳಿಸಲಾಗಿದೆ. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಮತ್ತಷ್ಟು ಮುಂದೆ ಬರಬೇಕು ಎಂದು ಹೇಳಿದರು. ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗಾಲಯ ಹಲವು ಹೊಸ ಪ್ರಯೋಗಗಳಿಗೆ ಸಾಕ್ಷಿಯಾಗಿದೆ. ಭಾರತದ ಅಮೃತ ಕಾಲದ ಸಂದರ್ಭದಲ್ಲಿ ಇನ್ನಷ್ಟು ಪ್ರಗತಿ ಕಾಣುತ್ತಿದೆ. ವೈಮಾಂತರಿಕ್ಷ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದೆ. ಕೇಂದ್ರ ಸರ್ಕಾರವು ಎಲ್ಲ ರೀತಿಯ ಸಹಾಯ, ಸಹಕಾರ ನೀಡುತ್ತಿದೆ. ಯುವಜನತೆ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ವೈಮಾಂತರಿಕ್ಷ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ದೇಶದ ಪ್ರಗತಿಗೆ ಕೊಡುಗೆ ನೀಡುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಅಸಾಧಾರಣ ಪ್ರಗತಿ ಸಾಧಿಸಿದೆ. ಚಂದ್ರಯಾನ-3ರ ಯಶಸ್ಸು ಸೇರಿದಂತೆ ಹಲವು ಯೋಜನೆಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು. ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ಮಂದಿ ಆತ್ಮೀಯವಾಗಿ ಬೀಳ್ಕೊಟ್ಟರು.