ಬೆಂಗಳೂರು, ಜೂ 01(DaijiworldNews/AA): ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇಂದು ಜಾಮೀನು ಮಂಜೂರಾಗಿದೆ.
ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದ ಹಿನ್ನೆಲೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿತ್ತು. ಹೀಗಾಗಿ ಇಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯಕ್ಕೆ ವಿಚಾರಣೆಗೆಂದು ಹಾಜರಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ೪೨ನೇ ಎಸಿಎಂಎಂ ನ್ಯಾಯಾಲಯ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.
ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ 40% ಭ್ರಷ್ಟಾಚಾರ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು.