ಬೆಂಗಳೂರು, ಜೂ. 08(DaijiworldNews/AA): ಗ್ಯಾರಂಟಿಗೂ ಮತಕ್ಕೂ ಸಂಬಂಧವಿಲ್ಲ. ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿಗಳನ್ನು ಮತ ಪಡೆಯಲು ನೀಡಿಲ್ಲ. ಮೋದಿಯವರ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರಿಗೆ ಸಹಾಯವಾಗಲು, ಬಡ ಹಾಗೂ ಮಧ್ಯಮ ವರ್ಗದವರಿಗೆ ಸಹಾಯವಾಗಲು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.
ಬಜೆಟ್ನಲ್ಲಿ ಗ್ಯಾರಂಟಿಗಳಿಗಾಗಿ 5,500 ಕೋಟಿಯನ್ನು ಸಿಎಂ ಸಿದ್ದರಾಮಯ್ಯ ಅವರು ಮೀಸಲಿರಿಸಿದ್ದಾರೆ. ಹೀಗಾಗಿ ಯಾವುದೇ ಸಮಸ್ಯೆ ಇಲ್ಲ. ನಮ್ಮ ಸರ್ಕಾರ ಅಧಿಕಾರದಲ್ಲಿ ಇರುವ ತನಕ ಶಕ್ತಿ ಯೋಜನೆ ಇರುತ್ತದೆ. ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಆಗಲೂ ಶಕ್ತಿ ಯೋಜನೆ ಮುಂದುವರೆಯುತ್ತದೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಬಸ್ ದರ ಏರಿಕೆ ವಿಚಾರವಾಗಿ ಮಾತನಾಡಿದ ಅವರು, ಮಾದರಿ ನೀತಿ ಸಂಹಿತೆ ಇರುವುದರಿಂದ ಈ ವಿಷಯದ ಕುರಿತು ಚರ್ಚೆಯಾಗಿಲ್ಲ. ಬಸ್ ನಿಗಮಗಳಿಂದ ಇದುವರೆಗೂ ಸರ್ಕಾರಕ್ಕೆ ಪ್ರಸ್ತಾವನೆ ಬಂದಿಲ್ಲ. ಇಂಧನ ಮತ್ತು ಬಿಡಿಭಾಗಗಳ ಬೆಲೆ ಏರಿಕೆಯಾಗಿದೆ. ಮೊದಲು ಸಾರಿಗೆ ಸಂಸ್ಥೆಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿ. ಆನಂತರದಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದರು.