ನವದೆಹಲಿ, ಜೂ. 10(DaijiworldNews/AA): ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಆಯ್ಕೆಯಾಗಿರುವ ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರದಿಂದ ಖಾತೆ ಹಂಚಿಕೆಯಾಗಿದೆ.
ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ವಿ. ಸೋಮಣ್ಣ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾಗಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ, ಪ್ರಹ್ಲಾದ್ ಜೋಶಿ ಅವರಿಗೆ ಆಹಾರ ಮತ್ತು ನಾಗರೀಕ ಸರಬರಾಜು ಖಾತೆ, ನವೀಕರಿಸಬಹುದಾದ ಇಂಧನ ಖಾತೆ, ಶೋಭಾ ಕರಂದ್ಲಾಜೆ ಅವರಿಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯ ಖಾತೆ ಹಾಗೂ ವಿ. ಸೋಮಣ್ಣ ಅವರಿಗೆ ಜಲಶಕ್ತಿ ರಾಜ್ಯಖಾತೆ, ರೈಲ್ವೇ ಸಚಿವ ರಾಜ್ಯ ಖಾತೆ ಹಂಚಿಕೆಯಾಗಿದೆ.
3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ಮೊದಲ ಸಂಪುಟ ಸಭೆ ನಡೆಸಿದರು. ಈ ಸಭೆಯ ಬಳಿಕ ಖಾತೆ ಹಂಚಿಕೆ ಮಾಡಲಾಗಿದ್ದು, ಪ್ರಮುಖ ಖಾತೆಗಳನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದೆ. ಇನ್ನು ಪ್ರಹ್ಲಾದ್ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರು 2ನೇ ಬಾರಿಗೆ ಮೋದಿ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ.