ನವದೆಹಲಿ, 16(DaijiworldNews/AK): ನೀಟ್ ಪರೀಕ್ಷೆ ವಿಷಯದಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವವರನ್ನು ಬಿಡುವುದಿಲ್ಲ. ಯಾವ ತಪ್ಪಿತಸ್ಥರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಪ್ರತಿಭಟನಾನಿರತ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಭೇಟಿ ಮಾಡಿದ ನಂತರ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ತಮ್ಮ ಸರ್ಕಾರ ಯಾವುದೇ ಅಕ್ರಮಗಳನ್ನು ಸಹಿಸುವುದಿಲ್ಲ ಎಂದರು.
ಸುಪ್ರೀಂ ಕೋರ್ಟ್ನ ಆದೇಶದಂತೆ ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಯಾರ ವೃತ್ತಿಯ ಜೊತೆಯೂ ಆಟವಾಡುವುದಿಲ್ಲ ಎಂದು ಅಭ್ಯರ್ಥಿಗಳಿಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಶಿಫಾರಸಿನ ಮೇರೆಗೆ 1,563 ಅಭ್ಯರ್ಥಿಗಳಿಗೆ ಮರುಪರೀಕ್ಷೆ ಕೊಟ್ಟಿದ್ದಾರೆ. ಎರಡು ಸ್ಥಳಗಳಲ್ಲಿ ಕೆಲ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ ಎಂದರು.
ಎನ್ಟಿಎಯ ದೊಡ್ಡ ಅಧಿಕಾರಿಗಳೂ ಶಾಮೀಲಾಗಿದ್ದಲಿ ಅವರನ್ನೂ ಬಿಡುವುದಿಲ್ಲ. ಎನ್ಟಿಎಯಲ್ಲೂ ಸಾಕಷ್ಟು ಸುಧಾರಣೆ ಆಗಬೇಕಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಮೇ 5ರಂದು ದೇಶಾದ್ಯಂತ 571 ನಗರಗಳಲ್ಲಿ ಮತ್ತು 14 ಅಂತಾರಾಷ್ಟ್ರೀಯ ಕೇಂದ್ರಗಳಲ್ಲಿನ ಒಟ್ಟು 4,750 ಸೆಂಟರ್ಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದರು. ಜೂನ್ 4ರಂದು ಫಲಿತಾಂಶ ಪ್ರಕಟವಾಗಿದ್ದು 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಕೊಡಲಾಗಿರುವುದು ಬೆಳಕಿಗೆ ಬಂದಿದೆ.