ಹುಬ್ಬಳ್ಳಿ, ಜೂ. 18(DaijiworldNews/AA): ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜೂನ್ 17ರಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿ.ಟಿ ರವಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟೀಕೆ ಮಾಡಿದ್ದು, ಅವರಿಗೆ ಅಗೌರವ ತೋರಿದ್ದಾರೆ ಎಂದು ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅವರು ಮಾನನಷ್ಟ ಮೊಕದ್ದಮೆ ಹಾಕುವಂತೆ ದೂರಿನಲ್ಲಿ ತಿಳಿಸಲಾಗಿದೆ.
ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ನಡೆಸಿದ್ದ ಪ್ರತಿಭಟನೆಯಲ್ಲಿ ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡೋದು. ಭಂಡತನದ ಸಮರ್ಥನೆ ಬಿಟ್ಟು ಯಾಕೆ ಸೆಸ್ ಹಾಕೀರೋದು ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಸಿ.ಟಿ ರವಿ ಅವರು ಆಡಿದ ಈ ಮಾತುಗಳೇ ಅವರಿಗೆ ಸಂಕಷ್ಟ ತಂದೊಡ್ಡಿದೆ.