ಬೆಳಗಾವಿ, ಜೂ.25(DaijiworldNews/AA): ಹಾಲಿನ ದರ ಏರಿಕೆ ಖಂಡಿಸಿ ಕರ್ನಾಟಕ ಬಿಜೆಪಿ ಜುಲೈ 3 ಅಥವಾ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಜುಲೈ 3 ಅಥವಾ 4ರಂದು ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಕರ್ನಾಟಕ ಸರ್ಕಾರ ಒಂದು ರೀತಿ ಹುಚ್ಚರ ಸಂತೆಯಾಗಿದೆ. ಮೊನ್ನೆಯಷ್ಟೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದಾರೆ. ಈಗ ಹಾಲಿನ ದರ ಏರಿಕೆ ಮಾಡಲಾಗಿದೆ ಎಮದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಲಿನ ದರ ಲೀಟರ್ಗೆ 2 ರೂಪಾಯಿ ಏರಿಕೆ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ ಮಾಡುತ್ತಿದೆ. ತುಘಲಕ್ ರೀತಿ ಕಾಂಗ್ರೆಸ್ ಸರ್ಕಾರವನ್ನು ನಡೆಸುತ್ತಿದೆ. ಈ ತಿಂಗಳು, ಮುಂದಿನ ತಿಂಗಳು ಸರ್ಕಾರದ ಬಳಿ ಹಣವೇ ಇಲ್ಲ. ಇದೇ ವೇಳೆ ವೇತನ ಪರಿಷ್ಕರಣೆ ಕೂಡ ಕ್ಯಾಬಿನೆಟ್ ಬಳಿ ಬಂದಿದೆ. ಐದಲ್ಲ ಐವತ್ತು ಗ್ಯಾರಂಟಿ ಕೊಡಿ, ಆದರೆ ವೈಜ್ಞಾನಿಕವಾಗಿ ಮಾಡಿ. ಚುನಾವಣೆಯಲ್ಲಿ ಜನ ನಿಮ್ಮ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಜನ ಇಷ್ಟು ಛೀಮಾರಿ ಹಾಕಿದ್ರೂ ನಿಮಗೆ ನಾಚಿಗೆ ಆಗಿಲ್ಲ. ಎಂಪಿ ಚುನಾವಣೆಯಲ್ಲಿ ಮತ ಹಾಕಿಲ್ಲ ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.