ಮಂಡ್ಯ, ಜೂ.30(DaijiworldNews/AA): ಸಿಎಂ ಖುರ್ಚಿ ಈಗ ಎಲ್ಲಿ ಖಾಲಿಯಿದೆ? ಖಾಲಿ ಇರುವಾಗ ಚರ್ಚೆ ಮಾಡಬೇಕು. ಇಲ್ಲದಿರುವಾಗ ಚರ್ಚೆ ಅಗತ್ಯವಿಲ್ಲ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಮಾತನಾಡಿದ ಅವರು, ಚಂದ್ರಶೇಖರ ಶ್ರೀಗಳು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಆದರೆ ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ತಿಳಿಸಿದ್ದಾರೆ.
ಸ್ವಾಮೀಜಿ ಅವರ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನ ಮಾಡಿಯಾಗಿದೆ. ಒಕ್ಕಲಿಗರು, ಲಿಂಗಾಯತರು, ದಲಿತರು ಕೇಳ್ತಿದ್ದಾರೆ. ಅವರು ಕೇಳುವುದರಲ್ಲಿ ತಪ್ಪೇನಿದೆ? ನಮ್ಮದು ಹೈಕಮಾಂಡ್ ಪಕ್ಷ. ನಮ್ಮ ಪಕ್ಷದ ಹೈಕಮಾಂಡ್ ಯಾರು ಸಿಎಂ ಅಂತ ತೀರ್ಮಾನಿಸುತ್ತೆ. ಹೈಕಮಾಂಡ್ ಹಾಕಿದ ಗೆರೆಯನ್ನ ನಾವ್ಯಾರು ದಾಟಲ್ಲ. ಇದು ನಮ್ಮ ಪಕ್ಷದ ನಿಯಮ. ಏನೇ ಇದ್ದರೂ ನಮ್ಮ ಹೈಕಮಾಂಡ್ ತೀರ್ಮಾನಿಸಲಿದೆ ಎಂದಿದ್ದಾರೆ.