ಹುಬ್ಬಳ್ಳಿ, ಮೇ16(Daijiworld News/SS): ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆಯಾಗಲಿದೆ. ಮೈತ್ರಿ ಪಕ್ಷಗಳ ಕಚ್ಚಾಟ ನಿಲ್ಲಬೇಕು ಎಂದು ರಾಜ್ಯದ ಜನ ಬಯಸುತ್ತಿದ್ದಾರೆ. ಆದರೆ ಮೈತ್ರಿ ಪಕ್ಷಗಳಲ್ಲಿ ದಿನದಿಂದ ದಿನಕ್ಕೆ ಕಚ್ಚಾಟ ಹೆಚ್ಚಾಗಲಿದೆ. ಚುನಾವಣಾ ಫಲಿತಾಂಶದ ಬಳಿಕ ಇದು ಇನ್ನಷ್ಟು ಹೆಚ್ಚಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಡಳಿತನ ನಡೆಸುತ್ತಿರುವ ಸರ್ಕಾರವನ್ನು ಪತನಗೊಳಿಸಲು ನಾವು ಸಂಚು ಮಾಡಿಲ್ಲ. ನಾವು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಲು ಸಿದ್ಧವಿದ್ದೇವೆ. ಸಿದ್ದರಾಮಯ್ಯ ಬೆಂಬಲಿಗರು ಕಾಲುಕೆರೆದು ಜಗಳ ಮಾಡುತ್ತಿದ್ದಾರೆ. ಸರ್ಕಾರ ತನ್ನಿಂದ ತಾನಾಗಿ ಪತನಗೊಳ್ಳಲಿದೆ ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ತಮ್ಮ ಬೆಂಬಲವಿದೆ. ಅದನ್ನೇ ನಾನು ಹೇಳುತ್ತಿದ್ದೇನೆ ಎಂದು ಹೇಳಿದರು.
ವೀರಶೈವ ಲಿಂಗಾಯತ ಸಮಾಜದ ಮತ ಕೇಳುವ ಹಕ್ಕು ಕಾಂಗ್ರೆಸ್ನವರಿಗಿಲ್ಲ. ಜೆಡಿಎಸ್ನವರು ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಖಂಡನೀಯ ಎಂದು ಹೇಳಿದರು.