ಶಿರೂರು,ಜು.21(DaijiworldNews/AK): ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಜನ ಹಾಗೂ 44 ಜನ ಮಿಲಿಟರಿಯವರು ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಗೋವಾ ಮತ್ತು ಅಂಕೋಲಾ ನಡುವೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಭೂ ಕುಸಿತವಾಗಿದೆ. ಭೂ ಕುಸಿತದಿಂದ 10 ಜನ ಕಾಣೆಯಾಗಿದ್ದಾರೆ. ಅದರಲ್ಲಿ ಏಳು ಜನರ ಹೆಣಗಳು ಪತ್ತೆಯಾಗಿದ್ದು ಇನ್ನೂ ಮೂವರು ಕಾಣೆಯಾಗಿದ್ದು ಅವರ ಪತ್ತೆಗಾಗಿ ಪರಿಹಾರ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ವಿವರಿಸಿದರು.
ಘಟನೆಯಲ್ಲಿ ಖಾಲಿ ಗ್ಯಾಸ್ ಟ್ಯಾಂಕರ್ ಹಾಗೂ ಭರ್ತಿಯಾಗಿರುವ ಗ್ಯಾಸ್ ಟ್ಯಾಂಕರ್ ಕೂಡ ಸಿಕ್ಕಿಹಾಕಿಕೊಂಡಿದ್ದು, ಅಲ್ಲಿಯೇ ವಾಸವಾಗಿರುವ ಒಂದೇ ಕುಟುಂಬದವರು ಟೀ ಅಂಗಡಿಯನ್ನು ಇಟ್ಟುಕೊಂಡಿದ್ದರು. ಅವರಲ್ಲಿ ಐವರು ಭೂ ಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ರಿಸ್ಕ್ ಆಪರೇಶನ ನ್ನು ತ್ವರಿತವಾಗಿ ಮಾಡಬೇಕೆಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸ್ಪಷ್ಟವಾಗಿ ಸೂಚಿಸಿದ್ದೇನೆ ಎಂದರು.
ಮೃತರ ಕುಟುಂಬಕ್ಕೆ ಐದು ಲಕ್ಷ ಪರಿಹಾರ:
ವಿಧಾನಸಭಾ ಅಧಿವೇಶನ ನಡೆಯುತ್ತಿದ್ದುದರಿಂದ ಇಂದು ಭೇಟಿ ನೀಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಎಲ್ಲಾ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದ್ದೆ. ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕೆಂದು ಘೋಷಿಸಲಾಗಿದೆ. ಈಗಾಗಲೇ ಅದನ್ನು ವಿತರಿಸಲಾಗಿದೆ. ಒಂದು ವೇಳೆ ಭೂ ಕುಸಿತದಲ್ಲಿ ಇನ್ಯಾರಾದರೂ ಸಾವನ್ನಪ್ಪಿದ್ದಾರೆ ಅವರಿಗೂ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು ಎಂದರು.
ನೌಕಾದಳ ಹಾಗೂ ರಕ್ಷಣಾ ತಂಡದವರಿಗೆ ಎಲ್ಲೆಡೆ ಹುಡುಕುವಂತೆ ಸೂಚನೆ ನೀಡಲಾಗಿದೆ ಎಂದರು. 10 ಜನರು ಕಾಣೆಯಾಗಿದ್ದಾರೆ. ಘಟನೆ ನಡೆದ ದಿನವೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರನ್ನೂ ಹಾಗೂ ಶಾಸಕರನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದರು.
ಅವೈಜ್ಞಾನಿಕ ಕಾಮಗಾರಿ: ತಪ್ಪಿತಸ್ಥರ ವಿರುದ್ಧ ಕ್ರಮ:
ಭೂ ಕುಸಿತವು ಪ್ರಕೃತಿ ವಿಕೋಪವಲ್ಲ ಐ.ಆರ್.ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಆಗಿದೆ. ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಕೂಡ ಅವರ ಮೇಲೆ ಕ್ರಮ ವಹಿಸಲಾಗುವುದು, ರಸ್ತೆ ನಿರ್ಮಾಣ ಮಾಡಿರುವವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು. ಪರಿಹಾರ ಕಾಮಗಾರಿ ಮುಗಿದ ಮೇಲೆ ಪ್ರಕರಣದ ಬಗ್ಗೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಒತ್ತಾಯ:
ಕೇಂದ್ರ ಸರ್ಕಾರ ರಸ್ತೆ ಪೂರ್ಣಗೊಳ್ಳದಿದ್ದರೂ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಕೇಂದ್ರ ರಸ್ತೆ ಸಾರಿಗೆ ಸಚಿವರೊಂದಿಗೆ ನಾನು ಮಾತನಾಡುತ್ತೇನೆ. ಕಳಪೆ ಕೆಲಸ ವಾಗಿದ್ದಾರೆ ಅದನ್ನು ಕೂಡಲೇ ಸರಿಪಡಿಸುವ ಕೆಲಸ ಮಾಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಲಾಗುವುದು ಎಂದರು.
ರಾಜ್ಯ ಸರ್ಕಾರ ವಿಳಂಬ ಮಾಡಿಲ್ಲ
ಕೇರಳದ ಲಾರಿ ಇಲ್ಲಿ ಸಿಕ್ಕಿಹಾಕಿಕೊಡಿರುವುದರಿಂದ ಕೇರಳ ಪೊಲೀಸರು ಹಾಗೂ ಮಾಧ್ಯಮದವರು ರಾಜ್ಯ ಸರ್ಕಾರ ವಿಳಂಬ ಕಾರ್ಯಾಚರಣೆ ಮಾಡುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ರಾಜ್ಯ ಸರ್ಕಾರ ಯಾವುದನ್ನೂ ವಿಳಂಬ ಮಾಡಿಲ್ಲ. ಎಲ್ಲವನ್ನೂ ತ್ವರಿತವಾಗಿ ಮಾಡುತ್ತಿದ್ದೇವೆ. ಕೇರಳದ ಅರ್ಜುನ್ ಎಂಬುವರು ಕಾಣೆಯಾಗಿದ್ದು, ತಮ್ಮ ರಾಜ್ಯದವರೆಂದು ಅವರೆಲ್ಲಾ ಬಂದಿರಬಹುದು. ಆದರೆ ನಾವು ವಿಳಂಬ ಮಾಡದೇ, ನಿರ್ಲಕ್ಷ್ಯ ತೋರದೆ ಕೆಲಸ ಮಾಡುತ್ತಿದ್ದೇವೆ ಎಂದರು.
ಭೂ ಕುಸಿತ ತಡೆಗಟ್ಟಲು ಪ್ರಯತ್ನ
34 ಸ್ಥಳಗಳಲ್ಲಿ ಭೂ ಕುಸಿತವಾಗುತ್ತದೆ ಎಂದು ಒಂದು ವರ್ಷದ ಹಿಂದೆಯೇ ವರದಿಯಾಗಿದೆ, ಸತ್ತ ಮೇಲೆಯೇ ಕ್ರಮವೇಕೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಯಿತು. ಕಳೆದ ಬಾರಿ ಬರವಿದ್ದು, ಈ ಬಾರಿ ಮಳೆಯಾಗುತ್ತಿದೆ. ಬಹಳ ವರ್ಷ ಗಳಿಂದ ಇಲ್ಲಿ ಭೂ ಕುಸಿತವಾಗಿರಲಿಲ್ಲ. ಎಲ್ಲೆಲ್ಲಿ ಭೂ ಕುಸಿತವಾಗುತ್ತದೆಯೋ ಅದನ್ನು ತಡೆಗಟ್ಟಲು ಪ್ರಯತ್ನಿಸಲಾಗುವುದು ಎಂದರು.
ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರಾಜಕಾರಣ ಮಾಡುವುದಿಲ್ಲ.
ರಾತ್ರಿ ವೇಳೆ ಕಾರ್ಯಾಚರಣೆ ನಡೆಯುವುದಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರಾಜಕಾರಣ ಮಾಡುವುದಿಲ್ಲ. ಕೇಂದ್ರ ಸರ್ಕಾರದ ತಂಡ ಎನ್.ಡಿ.ಆರ್. ಎಫ್ ಕೂಡ ಇಲ್ಲಿ ಕಾರ್ಯಾಚರಣೆ ಮಾಡುತ್ತಿದೆ. ನೌಕಾ ತಂಡವೂ ಇದೆ. ಇಲ್ಲಿ ಇನ್ಯಾರ ಮೇಲೆಯೂ ದೋಷ ಹೊರೆಸಲು ನಾನು ಹೋಗುವುದಿಲ್ಲ.
ಸಾಧ್ಯವಾದಷ್ಟು ಜೀವ ಉಳಿಸುವ ಪ್ರಯತ್ನ
ಭೂ ಕುಸಿತದಿಂದ ಮರಣ ಹೊಂದಿದವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ನಾವು ಕೊಡುವ ಪರಿಹಾರದಿಂದ ಅವರ ಜೀವ ಮರಳಿ ಬರುವುದಿಲ್ಲ. ಪ್ರಕೃತಿ ವಿಕೋಪದಿಂದಾಗಿರುವ ಘಟನೆ ಇದು. ಸಾಧ್ಯವಾದಷ್ಟು ಅವರನ್ನು ಉಳಿಸುವ ಪ್ರಯತ್ನ ಮಾಡಲಾಗುವುದು. ಇಲ್ಲದಿದ್ದರೆ ಅವರ ಮೃತ ದೇಹವನ್ನು ಪತ್ತೆಹಚ್ಚುವ ಕೆಲಸ ಮಾಡಲಾಗುವುದು ಎಂದರು.
ಉಳುವರೆ ಗ್ರಾಮದಲ್ಲಿ ಮನೆಗಳ ಹಾನಿ: ಕೂಡಲೆ ಪರಿಹಾರ
ಉಳುವರೆ ಎಂಬ ಗ್ರಾಮದಲ್ಲಿ ಮಳೆಯಿಂದಾಗಿ ಏಳು ಮನೆಗಳು ಹಾನಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೂಡಲೇ ಪರಿಹಾರ ನೀಡಲಾಗುವುದು ಹಾಗೂ ಪರ್ಯಾಯ ಸ್ಥಳವನ್ನೂ ನೀಡಲಾಗುವುದು ಎಂದರು.