ಬೆಂಗಳೂರು, ಆ.1(DaijiworldNews/AK): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿ.ಜೆ ಅಬ್ರಾಹಂ ಅವರ ದೂರಿನನ್ವಯ ಮುಖ್ಯಮಂತ್ರಿಗಳಿಗೆ ಜುಲೈ
26ರಂದು ನೀಡಿರುವ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟ ರಾಜ್ಯಪಾಲರಿಗೆ ಸಲಹೆ ನೀಡಲು ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇಂದು ಸಚಿವ ಸಂಪುಟ ಸಭೆಯ ತೀರ್ಮಾನದ ಬಗ್ಗೆ ವಿಧಾನಸೌಧದ ಸಮ್ಮೇ ಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಎಂ, ಸಚಿವ ಸಂಪುಟ ಸಭೆಯಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ವಿಚಾರವಾಗಿ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ. ಬೇರೆ ರಾಜ್ಯಗಳಲ್ಲಿ ನಡೆದಿರುವ ಪ್ರಕರಣ, ಇತರೆ ಪ್ರಕರಣಗಳಲ್ಲಿ ನ್ಯಾಯಾಲಯದ ಮಾರ್ಗದರ್ಶನ ಹಾಗೂ ತೀರ್ಪು, ಇಂತಹ ಪರಿಸ್ಥಿತಿಯಲ್ಲಿ ಬೇರೆ ರಾಜ್ಯಗಳಲ್ಲಿ ಯಾವ ಸರ್ಕಾರಗಳು ಯಾವ ರೀತಿ ನಡೆದುಕೊಂಡಿವೆ ಎಂದು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ಅಕ್ರಮ ನಡೆದಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಾಗಲಿ, ತನಿಖಾ ಸಂಸ್ಥೆಗಳ ವಿಚಾರಣೆಯಾಗಲಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ವಿಚಾರಣೆ ನಡೆಸಲು ಹೇಗೆ ಸಾಧ್ಯ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುದೊಡ್ಡ ಬಹುಮತದೊಂದಿಗೆ ಆಯ್ಕೆಯಾದ ರಾಜ್ಯದ ಮುಖ್ಯಮಂತ್ರಿಗಳನ್ನು ಕೆಳಗಿಳಿಸಲು ಷಡ್ಯಂತ್ರ ನಡೆಯುತ್ತಿದೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಕಿಡಿಕಾರಿದರು.