ಬೆಂಗಳೂರು,ಮೇ 21 (Daijiworld News/MSP): ಮುಸ್ಲಿಮರು ಸ್ವಾಭಿಮಾನಿಗಳು. ಅವರನ್ನು ಊಳಿಗದ ಆಳುಗಳಂತೆ ಕಂಡರೆ ಪರ್ಯಾಯ ಮಾರ್ಗದ ಬಗ್ಗೆಯೂ ಯೋಚನೆ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.
ಕರ್ನಾಟಕದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ಗೆ ಹಿನ್ನಡೆಯಾಗುವ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಬೇಗ್ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ರೋಷನ್ ಬೇಗ್ ಕಿಡಿಕಾರಿದ್ದಾರೆ. ಜತೆಗೆ ಅಂತಹ ಸಂದರ್ಭ ಸೃಷ್ಟಿಯಾದರೆ ಮುಸಲ್ಮಾನರು ಎನ್ಡಿಎಗೆ ಬೆಂಬಲಿಸುವ ನಿಲುವನ್ನೂ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿ ಕಾಂಗ್ರೆಸ್ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ.
ಮಾಧ್ಯಮವೊಂದಕ್ಕೆ ತಮ್ಮ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ನಮ್ಮ ಪಕ್ಷದ ಪ್ರಚಾರ ರೀತಿ ನೋಡಿಯೇ ಫಲಿತಾಂಶ ಮನದಟ್ಟಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸೋತರೆ ಅದರ ಹೊಣೆಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಹೊತ್ತುಕೊಳ್ಳಬೇಕಾಗುತ್ತದೆ. ಎಲ್ಲೋ ತೇಲುತ್ತಿರುವ ಅವರು ನೆಲಕ್ಕಿಳಿದು ನೋಡಿ ವಾಸ್ತವವನ್ನು ಅರ್ಥಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷ ಎಂದರೆ ಅಲ್ಪಸಂಖ್ಯಾತ ಮುಖಂಡರು ಪಕ್ಷದ ವೇದಿಕೆಯಲ್ಲೂ ಈ ಹಿಂದೆಯೂ ಲೋಕಸಭೆಗೆ ಮುಸ್ಲಿಮರಿಗೆ ಒಂದೇ ಕ್ಷೇತ್ರದಲ್ಲಿ ಟಿಕೆಟ್ ಕೊಟ್ಟ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ್ದರು.