ಮಂಗಳೂರು, ಆ. 11 (DaijiworldNews/AA): ಕಿನ್ನಿಗೋಳಿಯ ಸೈಂಟ್ ಮೇರಿಸ್ ಸೆಂಟ್ರಲ್ ಶಾಲೆಯ 14ರ ವಯೋಮಿತಿಯ ಬಾಲಕಿಯರ ತಂಡವು ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.


ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ದಾವಣಗೆರೆಯ ಕ್ರೀಡಾಂಗಣದಲ್ಲಿ ಆಗಸ್ಟ್ 7 ರಿಂದ 10 ರ ವರೆಗೆ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಕಿನ್ನಿಗೋಳಿಯ ಸೈಂಟ್ ಮೇರಿಸ್ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳ ತಂಡ ಭಾಗವಹಿಸಿ ಉತ್ತಮ ಸಾಧನೆ ತೋರಿದ್ದಾರೆ. ಈ ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 150 ಶಾಲೆಯವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ ಸೈಂಟ್ ಮೇರಿಸ್ ಸೆಂಟ್ರಲ್ ಶಾಲೆಯ 14ರ ವಯೋಮಿತಿಯ ಬಾಲಕಿಯರ ತಂಡವು ವಾಲಿಬಾಲ್ ಪಂದ್ಯಾಟದಲ್ಲಿ ಉತ್ತಮ ಸಾಧನೆಯೊಂದಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ ಹಾಗೂ ಮುಂದಿನ ತಿಂಗಳಲ್ಲಿ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
17ರ ವಯೋಮಿತಿಯಲ್ಲಿ ನಡೆದ ಬಾಲಕರ ವಿಭಾಗದ ವಾಲಿಬಾಲ್ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ ಹಾಗೂ 17ರ ವಯೋಮಿತಿ ನಡೆದ ಬಾಲಕಿಯರ ವಿಭಾಗದ ವಾಲಿಬಾಲ್ ತಂಡವು ತೃತೀಯ ಸ್ಥಾನ ಪಡೆದುಕೊಂಡಿದೆ. ವಾಲಿಬಾಲ್ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣದ ಉಪನ್ಯಾಸಕ ಶ್ರೀಯುತ ಚಂದ್ರಕಾಂತ್ ರವರಿಗೆ ಶಾಲಾ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದರು.