ಮುಂಬೈ, ಜೂ 08 (DaijiworldNews/SM): ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ಟೀಂ ಇಂಡಿಯಾದ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿದ್ದ ಕೆ.ಎಲ್. ರಾಹುಲ್ ತಂಡಕ್ಕೆ ಅಲಭ್ಯರಾಗಲಿದ್ದಾರೆ. ಸದ್ಯ ರಾಹುಲ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ತಂಡದಿಂದ ಅವರು ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಅಂತಾರಾಷ್ಟ್ರೀಯ ಕ್ರಿಕೆಟ್ನತ್ತ ಮುಖ ಮಾಡಿದ್ದು, ಮೊದಲಿಗೆ ದಕ್ಷಿಣ ಆಫ್ರಿಕಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ.
ನಾಯಕ ರೋಹಿತ್ ಶರ್ಮಾ ಅಲಭ್ಯದ ಕಾರಣದಿಂದಾಗಿ ರಾಹುಲ್ ಅವರನ್ನು ನಾಯಕನನ್ನಾಗಿ ಬಿಸಿಸಿಐ ಆಯ್ಕೆ ಮಾಡಿಕೊಂಡಿತು. ಆದರೆ, ರಾಹುಲ್ ಸ್ನಾಯು ಸೆಳೆತದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಾತ್ರವಲ್ಲದೇ ತಂಡದ ಪ್ರಮುಖ ಆಟಗಾರ ಕುಲದೀಪ್ ಯಾದವ್ ಕೂಡ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ.
ರಾಹುಲ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ನಾಯಕತ್ವವನ್ನು ನಿರ್ವಹಿಸಿಲಿದ್ದು, ಅವರ ಉಪ ನಾಯಕ ಹಾರ್ದಿಕ್ ಪಾಂಡ್ಯಾ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ನಾಳೆಯಿಂದ(ಜೂನ್ 9) ಉಭಯ ತಂಡಗಳ ನಡುವಿನ ಈ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಎರಡೂ ತಂಡಗಳ ಆಟಗಾರರೂ ಸಹ ದೆಹಲಿ ತಲುಪಿ ಈಗಾಗಲೇ ಮೈದಾನಕ್ಕಿಳಿದು ಅಭ್ಯಾಸ ನಡೆಸುತ್ತಿದ್ದು, ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.