ಬೆಂಗಳೂರು, ಸೆ. 06 (DaijiworldNews/AA): ಅಶ್ಲೀಲ ಸಂದೇಶ ಹಾಗೂ ಕಾಮೆಂಟ್ಗಳನ್ನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯುವುದಿಲ್ಲ ಎಂದು ನಟಿ ರಮ್ಯಾ ಸ್ಪಷ್ಟನೆ ನೀಡಿದ್ದಾರೆ.

ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಕುಟುಂಬಸ್ಥರು ರಮ್ಯಾ ಅವರಲ್ಲಿ ಕ್ಷಮೆ ಕೋರಿ, ಈ ಬಾರಿ ತಪ್ಪಾಗಿದೆ. ದಯವಿಟ್ಟು ಪ್ರಕರಣ ವಾಪಸ್ ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಟಿ, "ಇದೊಂದು ಪಾಠ ಆಗಬೇಕು. ನಾನು ಯಾವುದೇ ಕಾರಣಕ್ಕೂ ಕೇಸ್ ವಾಪಸ್ ತೆಗೆದುಕೊಳ್ಳಲ್ಲ" ಎಂದು ತಿಳಿಸಿದ್ದಾರೆ.
"ಸೋಷಿಯಲ್ ಮೀಡಿಯಾ ಹಾಗೂ ಮೊಬೈಲ್ ಬಳಸಿಕೊಂಡು ಯಾರ ಬಗ್ಗೆಯಾದರೂ ಮನಬಂದಂತೆ ಕೆಟ್ಟದಾಗಿ ಕಾಮೆಂಟ್ ಮಾಡುವುದು ಸರಿಯಲ್ಲ. ಒಬ್ಬ ಹೆಣ್ಣುಮಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡುವ ಮೊದಲು ಸಾವಿರ ಬಾರಿ ಯೋಚಿಸುವಂತಾಗಬೇಕು. ಈ ಪ್ರಕರಣ ಎಲ್ಲರಿಗೂ ಒಂದು ಪಾಠವಾಗಬೇಕು" ಎಂದಿದ್ದಾರೆ.
"ಅಷ್ಟೇ ಅಲ್ಲದೇ ಪ್ರಕರಣದಲ್ಲಿ ಎಷ್ಟು ಬಾರಿ ಸಾಕ್ಷ್ಯ ಹೇಳಲು ಕರೆದರೂ ನ್ಯಾಯಾಲಯಕ್ಕೆ ಬಂದು ಸಾಕ್ಷ್ಯ ನೀಡಲು ಸಿದ್ಧವಿದ್ದೇನೆ. ಆದರೆ, ಆರೋಪಿಗಳನ್ನ ಕ್ಷಮಿಸುವ ಪ್ರಶ್ನೆಯೇ ಇಲ್ಲ" ಎಂದು ಹೇಳಿದ್ದಾರೆ.