ಅಮೇರಿಕಾ, ಮಾ. 25 (DaijiworldNews/TA): ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ವಿಧಿಸಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಪ್ರಧಾನಿ ನರೇಂದ್ರ ಮೋದಿಗೆ ದೂರವಾಣಿ ಕರೆ ಮಾಡಿ ಮಹತ್ವದ ಮಾತುಕತೆ ನಡೆಸಿದರು.

ಈ ಸಂಭಾಷಣೆಯಲ್ಲಿ ಹಾರ್ಮುಜ್ ಜಲಸಂಧಿಯನ್ನು ತೈಲ ಮತ್ತು ಇಂಧನ ವ್ಯಾಪಾರಕ್ಕೆ ಮುಕ್ತವಾಗಿಡುವ ಅಗತ್ಯವನ್ನು ಇಬ್ಬರು ನಾಯಕರು ಚರ್ಚಿಸಿದರು. ಪ್ರದೇಶದಲ್ಲಿ ಶಾಂತಿ ಮರುಸ್ಥಾಪನೆಗೆ ಭಾರತ ತನ್ನ ಬೆಂಬಲ ನೀಡುವುದರ ಕುರಿತಾಗಿಯೂ ಚರ್ಚೆ ನಡೆಯಿತು ಎನ್ನಲಾಗಿದೆ.
ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ನಡುವಿನ ಉದ್ವಿಗ್ನತೆ ಆರಂಭವಾದ ಬಳಿಕ ಟ್ರಂಪ್ ಮತ್ತು ಮೋದಿ ಮಾತನಾಡುತ್ತಿರುವುದು ಇದೇ ಮೊದಲ ಬಾರಿ ಎನ್ನಲಾಗಿದೆ. ಭಾರತದಲ್ಲಿರುವ ಅಮೆರಿಕದ ರಾಯಭಾರಿ ಸೆರ್ಗಿಯೋ ಗೋರ್ ಈ ಕುರಿತು ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದ್ದು, ಶಾಂತಿ ಸ್ಥಾಪನೆಗೆ ಭಾರತ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ನಂತರ ಪ್ರಧಾನಿ ಮೋದಿ ಕೂಡ ಎಕ್ಸ್ನಲ್ಲಿ ಪ್ರತಿಕ್ರಿಯಿಸಿ, ಜಾಗತಿಕ ಸ್ಥಿರತೆಗೆ ಹಾರ್ಮುಜ್ ಜಲಸಂಧಿ ಮುಕ್ತ ಮತ್ತು ಸುರಕ್ಷಿತವಾಗಿರುವುದು ಅತ್ಯಗತ್ಯ ಎಂದು ಒತ್ತಿ ಹೇಳಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆ ಮಾಡಲು ಭಾರತ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.