ರಿಯಾದ್, ನ.25 (DaijiworldNews/AA): ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನ ಫೈನಾನ್ಶಿಯಲ್ ಸೆಂಟರ್ನಲ್ಲಿರುವ ಗೋಪುರವೊಂದನ್ನು ಗುರಿಯಾಗಿಸಿಕೊಂಡು ಯೆಮೆನ್ನ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ಕಿಂಗ್ ಅಬ್ದುಲ್ಲಾ ಫೈನಾನ್ಶಿಯಲ್ ಡಿಸ್ಟ್ರಿಕ್ಟ್ನಲ್ಲಿರುವ ಗೋಪುರದ ಮೇಲೆ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಇಬ್ಬರು ಸೌದಿ ಪ್ರಜೆಗಳು, ಇಬ್ಬರು ಭಾರತೀಯರು, ಮೂವರು ನೇಪಾಳಿ ಪ್ರಜೆಗಳು ಮತ್ತು ನಾಲ್ವರು ಈಜಿಪ್ಟ್ ಪ್ರಜೆಗಳು ಸೇರಿದ್ದಾರೆ. ಘಟನೆ ನಡೆದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಲ್ಲಾ ತುರ್ತು ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಜೀವ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಅಗತ್ಯ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಸೌದಿ ಸಿವಿಲ್ ಡಿಫೆನ್ಸ್ ಮಾಹಿತಿ ನೀಡಿದೆ.
ಮಂಗಳವಾರ ರಿಯಾದ್ನಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯ ಪ್ರಜೆಗಳು ಗಾಯಗೊಂಡಿರುವುದು ತಿಳಿದುಬಂದಿದೆ. ರಾಯಭಾರ ಕಚೇರಿಯು ಈ ಕುರಿತು ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದು, ಗಾಯಾಳುಗಳು ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುವುದು. ಕೊಲ್ಲಿ ರಾಷ್ಟ್ರದಲ್ಲಿ ವಾಸಿಸುತ್ತಿರುವ ಭಾರತೀಯ ಪ್ರಜೆಗಳು ಸ್ಥಳೀಯ ನಿಯಮಗಳು ಮತ್ತು ನಿಬಂಧನೆಗಳನ್ನು ಪಾಲಿಸಬೇಕು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.