ವಾಷಿಂಗ್ಟನ್, ಮಾ.19 (DaijiworldNews/PY) : ಕೊರೊನಾ ಸೋಂಕು ಹಿನ್ನೆಲೆ ಭಾರತೀಯ ವಿದ್ಯಾರ್ಥಿಗಳು ಅಮೆರಿಕದಲ್ಲಿರುವ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟ ಕಾರಣ ತೊಂದರೆಗೆ ಒಳಗಾಗಿದ್ದಾರೆ. ಅವರ ಸಂಕಷ್ಟಕ್ಕೆ ಕ್ರಮಕೈಗೊಳ್ಳಬೇಕೆಂದು ಭಾರತೀಯ ರಾಯಭಾರ ಕಚೇರಿ ಅಮೆರಿಕ ಸರ್ಕಾರಕ್ಕೆ ಮನವಿ ಮಾಡಿದೆ.
ಸಾಂದರ್ಭಿಕ ಚಿತ್ರ
ಅಮೆರಿಕಾದ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ 2,00,000ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವೈದ್ಯಕೀಯ, ತಂತ್ರಜ್ಞಾನ ಹಾಗೂ ವಿಜ್ಞಾನ ಕ್ಷೇತ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವವರ ಸಂಖ್ಯೆ ಅಧಿಕವಾಗಿದೆ. ಅಮೆರಿಕದ 300ಕ್ಕೂ ಹೆಚ್ಚು ಉನ್ನತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮುಚ್ಚಿವೆ. ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಕರ್ಯಗಳನ್ನು ತೊರೆಯುವಂತೆ ಕೇಳಿಕೊಳ್ಳಲಾಗಿದೆ.
ಹಾಗಾಗಿ ಭಾರತೀಯ ವಿದ್ಯಾರ್ಥಿಗಳು ಇದರಿಂದ ತೊಂದರೆಗೆ ಒಳಗಾಗಿದ್ದಾರೆ. ಅಮೆರಿಕ ಸರ್ಕಾರ ವಿದ್ಯಾರ್ಥಿಗಳಿಗೆ ಆಹಾರ, ಮೂಲಸೌಕರ್ಯ, ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಭಾರತ ಮನವಿ ಮಾಡಿದೆ.
ಅಮೆರಿಕ ಸರ್ಕಾರವು ಇದಕ್ಕೆ ಸ್ಪಂದಿಸಿದ್ದು, ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಅಂತರಾಷ್ಟ್ರೀಯ ವಿದ್ಯಾರ್ಥಿಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂಬುದಾಗಿ ಅಮೆರಿಕ ಸರ್ಕಾರ ತಿಳಿಸಿದೆ ಎಂದು ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತದ ರಾಯಭಾರ ಕಚೇರಿ ಮೂಲಗಳು ತಿಳಿಸಿವೆ.